Connect with us

ದಿನದ ಸುದ್ದಿ

ದಾವಣಗೆರೆ | ಹೆಣ್ಣುಮಗು ಮಾರಾಟ ಪ್ರಕರಣ ಪತ್ತೆ, ಮಗು ರಕ್ಷಣೆ : ಎಸ್‍ಪಿ ಹನುಮಂತರಾಯ

Published

on

ಸುದ್ದಿದಿನ,ದಾವಣಗೆರೆ : ನಗರದಲ್ಲಿ ಹೆಣ್ಣುಮಗುವೊಂದನ್ನು ಮಾರಾಟ ಮಾಡಿದ ಪ್ರಕರಣವನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಮಾರ್ಗದರ್ಶನದಲ್ಲಿ ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಹಚ್ಚಿ ಮಗುವನ್ನು ರಕ್ಷಿಸಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಹೆಣ್ಣು ಮಗು ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದ ಪ್ರಕರಣದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿ, ಮಹಿಳಾ ರಕ್ಷಣಾ ಘಟಕದ ಅಧಿಕಾರಿ/ಸಿಬ್ಬಂದಿಗಳು ನೀಡಿದ ದೂರು ಮತ್ತು ಮಾಹಿತಿ ಮೇರೆಗೆ ಹೆಣ್ಣುಮಗುವಿನ ಮಾರಾಟ ಪ್ರಕರಣ ಪತ್ತೆ ಹಚ್ಚಿದ್ದು, ಮಧ್ಯವರ್ತಿಗಳಾಗಿ ಆಸ್ಪತ್ರೆಯೊಂದರ ಆಯಾ ಒಬ್ಬರು ಪಾಲ್ಗೊಂಡಿದ್ದು, ಮಕ್ಕಳ ಮಾರಾಟ ಪ್ರಕರಣದಲ್ಲಿ ವ್ಯವಸ್ಥಿತ ಜಾಲವೇನಾದರು ಕೆಲಸ ಮಾಡುತ್ತಿದೆಯೇ ಎಂಬ ತನಿಖೆ ನಡೆಸಲಾಗುವುದು ಹಾಗೂ ಈ ಪ್ರಕರಣ ಕುರಿತು ಸಮಗ್ರ ತನಿಖೆಗೆ ಈಗಾಗಲೇ ಆದೇಶಿಸಲಾಗಿದೆ ಎಂದರು.

ಜ.17 ರ ಸಂಜೆ ದಾವಣಗೆರೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿ ಕೆ.ಸಿ.ಬಸವರಾಜಯ್ಯನವರು ಮಹಿಳಾ ಠಾಣೆಗೆ ಹಾಜರಾಗಿ, 2019 ರ ಡಿ.26 ರಂದು ಡಾನ್‍ಬಾಸ್ಕೋ ಬಾಲಕಾರ್ಮಿಕ ಮಿಷನ್ ಸಹಾಯವಾಣಿ ಮೂಲಕ ಅನಾಮಧೇಯ ಕರೆ ಮಾಡಿ ಅಂಬೇಡ್ಕರ್ ನಗರ ನಿವಾಸಿ ಕವಿತಾ ಕೋಂ ಮಂಜುನಾಥ ಎಂಬವವರು ತಮ್ಮ ನಾಲ್ಕನೇ ಹೆಣ್ಣು ಮಗುವಾದ ಒಂದು ವರ್ಷ ಒಂದು ತಿಂಗಳಿನ ಸಾನ್ವಿ ಎಂಬ ಹೆಣ್ಣು ಮಗುವನ್ನು ಮಾರಾಟ ಮಾಡಿರುವುದಾಗಿ ಕರೆ ಮಾಡಿ ಮಾಹಿತಿ ನೀಡಿರುತ್ತಾರೆ.

ಈ ಕರೆಯನ್ನು ಆಧರಿಸಿ ಸಹಾಯವಾಣಿ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜ.8 ರಂದು ಪತ್ರ ಸಲ್ಲಿಸುತ್ತಾರೆ. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಚಂದ್ರಶೇಖರ್.ಎನ್.ಕೆ ಮತ್ತು ಕಿರಣ್‍ಕುಮಾರ್ ಎಂಬುವವರು ಆರೋಪಿಯ ಮನೆಯ ಕುರಿತಾಗಿ ಅಂಗನವಾಡಿ ಕಾರ್ಯಕರ್ತೆಯಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡು ಜ.9 ರಂದು ಮನೆಗೆ ಭೇಟಿ ನೀಡಿದಾಗ ಮಗುವಿನ ತಂದೆ ಮಂಜುನಾಥ್ ಸಿಕ್ಕಿದ್ದು, ವಿಚಾರಣೆ ನಡೆಸಿದಾಗ ಈಗಾಗಲೇ ತಮಗೆ 3 ಹೆಣ್ಣು ಮಕ್ಕಳಿದ್ದು, 4ನೇ ಮಗವೂ ಹೆಣ್ಣು ಮಗುವಾಗಿರುವ ಕಾರಣ ಹಾಗೂ ಮನೆಯಲ್ಲಿ ಕಷ್ಟವಿದ್ದ ಕಾರಣ ತಮ್ಮ ಮಗು ಸಾನ್ವಿಯನ್ನು ರಾಣೇಬೆನ್ನೂರಿನ ದ್ರಾಕ್ಷಾಯಿಣಿ ಕೋಂ ಸಿದ್ದು ಎಂಬುವವರಿಗೆ ರೂ.25 ಸಾವಿರಕ್ಕೆ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ.

ಮಗು ಮಾರಾಟ ಮಾಡಿದ ತಂದೆ ಮಂಜುನಾಥ, ತಾಯಿ ಕವಿತಾ ಮತ್ತು ಮಗುವನ್ನು ಖರೀದಿಸಿದ ದ್ರಾಕ್ಷಾಯಿಣಿ ಮತ್ತು ಆಕೆಯ ಗಂಡ ಸಿದ್ದು ಹಾಗೂ ಮಗು ಮಾರಾಟಕ್ಕೆ ಸಹಕಾರ ನೀಡಿದ ರವಿ, ಕರಿಬಸಪ್ಪ, ಚಿತ್ರಮ್ಮ ಮತ್ತು ಕಮಲಮ್ಮರವರ ಮೇಲೆ ದೂರು ದಾಖಲಿಸಿ ದಸ್ತಗಿರಿ ಮಾಡಲಾಗಿದೆ. ಮಗುವನ್ನು ರಕ್ಷಿಸಿ ನಿಯಮಾನುಸಾರ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ನಂತರ ಕಾನೂನಿನ ಮಾರ್ಗದರ್ಶನದಲ್ಲಿ ಮಗುವಿನ ಪಾಲನೆ-ಪೋಷಣೆ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರನ್ನೊಳಗೊಂಡು ಜಿಲ್ಲೆಯ ಎಲ್ಲ ಹೆರಿಗೆ ಆಸ್ಪತ್ರೆಗಳು, ಮಿಡ್‍ವೈಫರಿ, ಶುಶ್ರೂಷಕರ ಸಭೆ ನಡೆಸಿ ಹೆಣ್ಣು ಮಕ್ಕಳ ಸಂರಕ್ಷಣೆ ಮತ್ತು ದತ್ತು ನಿಯಮಗಳ ಕುರಿತು ಸೂಕ್ತ ಕಾನೂನಿನ ಅರಿವು ಮೂಡಿಸಲಾಗುವುದು ಎಂದ ಅವರು ಮಗು ಮಾರಾಟ ಪ್ರಕರಣ ಬೇಧಿಸುವಲ್ಲಿ ಸಹಕರಿಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ, ಸಿಬ್ಬಂದಿ ಹಾಗೂ ಮಹಿಳಾ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಿದರು.

ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಎಎಸ್‍ಪಿ ರಾಜೀವ್.ಎಂ, ನಗರ ಉಪವಿಭಾಗದ ಡಿವೈಎಸ್‍ಪಿ ಯು.ನಾಗೇಶ್ ಐತಾಳ್ ಇವರ ಸೂಕ್ತ ಮಾರ್ಗದರ್ಶನದಲ್ಲಿ ಮಹಿಳಾ ಠಾಣೆಯ ಪೊಲೀಸ್ ನಿರೀಕ್ಷಕಿ ನಾಗಮ್ಮ, ಸಿಬ್ಬಂದಿಗಳಾದ ಪಿಎಸ್‍ಐ ಮಾಳವ್ವ, ಪರಶುರಾಮ, ಪ್ರಸನ್ನ ಕುಮಾರ್, ರೇಣುಕಮ್ಮ, ಜಂಷಿದಾ ಖಾನಂ, ಕವಿತಾ, ಶಿವಲಿಂಗಮ್ಮ ಬಾಗೇವಾಡಿ, ಛಾಯಾ, ಕವಿತಾ.ಟಿ.ಎಸ್ ರವರ ತಂಡ ಪಾಲ್ಗೊಂಡಿತ್ತು ಎಂದು ಮಾಹಿತಿ ನೀಡಿದರು.

ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಅರಿವು

ರಸ್ತೆ ಸುರಕ್ಷತೆ ಕುರಿತು ಈ ವಾರ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ನಗರದಲ್ಲಿ ಒಟ್ಟು 10 ಹೈವೇ ಪೆಟ್ರೋಲಿಂಗ್ ವಾಹನ ವ್ಯವಸ್ಥೆ, 02 ಇಂಟರ್‍ಸೆಪ್ಟರ್ ಹಾಗೂ ಪ್ರತಿ ಠಾಣೆಗೆ ಒಂದರಂತೆ 13 ಪಿಸಿಆರ್ ವಾಹನಗಳು ಗಸ್ತು ವ್ಯವಸ್ಥೆಯಲ್ಲಿ ಪಾಲ್ಗೊಳ್ಳುತ್ತಿವೆ.

ಲೇನ್ ಡಿಸಿಪ್ಲೀನ್

ಮುಖ್ಯವಾಗಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲೇನ್ ಡಿಸಿಪ್ಲೀನ್ ಇಲ್ಲದೇ ಅನೇಕ ಸಾವು ನೋವು ಸಂಭವಿಸುತ್ತಿದ್ದು, ಇದನ್ನು ತಡೆಗಟ್ಟಲು ಲೇನ್ ಡಿಸಿಪ್ಲೀನ್‍ನನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ವಹಿಸಲು ಸರ್ವೋಚ್ಚ ನ್ಯಾಯಾಲಯ ಸೂಚಿಸಿದ್ದು ಇದರಂತೆ ಕ್ರಮ ವಹಿಸಲಾಗುವುದು.

ಸರಗಳ್ಳತನ ಜಾಲ ಪತ್ತೆಗೆ ಕ್ರಮ

ಜಿಲ್ಲೆಯಲ್ಲಿ ಸರಗಳ್ಳರ ಹಾವಳಿ ಹೆಚ್ಚಿದ್ದು ಇತ್ತೀಚೆಗೆ ನಡೆದ ಸರಣಿ ಸರಗಳ್ಳತನದಲ್ಲಿ ಪುಣೆಯ ಇರಾನಿ ತಂಡದ ಕೈವಾಡವಿದೆ ಎಂದು ತಿಳಿದುಬಂದಿದ್ದು ಈ ಕುರಿತು ಸಮಗ್ರ ತನಿಖೆ ಜೊತೆಗೆ ಸರಗಳ್ಳರನ್ನು ನಿಗ್ರಹಿಸಲು ಕ್ರಮ ವಹಿಸಲಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಎಎಸ್‍ಪಿ ರಾಜೀವ್, ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕಿ ನಾಗಮ್ಮ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending