Connect with us

ದಿನದ ಸುದ್ದಿ

ದಾವಣಗೆರೆ ಜಿಲ್ಲಾಧಿಕಾರಿಗಳಿಂದ ನಗರದಲ್ಲಿ ಮಾಸ್ಕ್ ಅಭಿಯಾನ | ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳಿಗೆ ನೋಟಿಸ್

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸುವ ದಿಸೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮಂಗಳವಾರ ನಗರದ ವಿವಿಧ ಪ್ರದೇಶಗಳಿಗೆ ತೆರಳಿ, ಮಾಸ್ಕ್ ಹಾಕದವರಿಗೆ ಸ್ಥಳದಲ್ಲಿಯೇ ದಂಡ ಹಾಕಿಸಿದರಲ್ಲದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳಿಗೆ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ದಾವಣಗೆರೆ ನಗರದ ಪ್ರಮುಖ ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಮಾಸ್ಕ್ ಅಭಿಯಾನ ನಡೆಸಿತು, ಅಲ್ಲದೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಸಾರ್ವಜನಿಕರಿಗೆ ಬುದ್ದಿವಾದ ಹೇಳಿದ ಜಿಲ್ಲಾಧಿಕಾರಿಗಳು, ಈ ರೀತಿ ನಿರ್ಲಕ್ಷ್ಯ ತೋರಿದರೆ ಕೊರೋನಾ ರೋಗ ನಿರ್ಮೂಲನೆ ಮಾಡುವುದು ಕಷ್ಟಸಾಧ್ಯ. ಎಲ್ಲರೂ ಮಾಸ್ಕ್ ಧರಿಸಿ, ಶುಚಿತ್ವವನ್ನು ಕಾಪಾಡಿಕೊಳ್ಳಬೇಕು, ಸಾಮಾಜಿಕ ಅಂತರದ ಬಗ್ಗೆ ಎಚ್ಚರ ವಹಿಸಬೇಕು ಎಂದು ತಿಳಿ ಹೇಳಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರೇ ಮಾಸ್ಕ್ ಧರಿಸದವರನ್ನು ಖುದ್ದು ಗುರುತಿಸಿ, ಅಂತಹವರಿಗೆ ಸ್ಥಳದಲ್ಲಿಯೇ ದಂಡ ಪಾವತಿಸುವಂತೆ ಸೂಚಿಸಿದರು. ಅಲ್ಲದೆ ಜಿಲ್ಲಾಧಿಕಾರಿಗಳೇ ಮಾಸ್ಕ್ ವಿತರಿಸಿದರು. ಮಾಸ್ಕ್ ಧರಿಸದ ಕೆಲವರಿಗೆ ಕೆಲ ಬೀದಿ ಬದಿ ವ್ಯಾಪಾರಿಗಳು ಕೂಡ ಮಾಸ್ಕ್ ಧರಿಸದೆ ವ್ಯಾಪಾರ ನಡೆಸುತ್ತಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ವ್ಯಾಪಾರಸ್ಥರನ್ನು ತರಾಟೆಗೆ ತೆಗೆದುಕೊಂಡು, ಅವರಿಗೂ ದಂಡ ವಿಧಿಸಿದರು. ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದ ಕೆಲ ವಾಹನ ಸವಾರರನ್ನು ಕೂಡ ತಡೆದು, ದಂಡ ವಿಧಿಸಲಾಯಿತು. ಹಲವು ಅಂಗಡಿಗಳ ಒಳಗೆ ಪ್ರವೇಶಿಸಿದ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ, ಅಂಗಡಿಗಳ ಮಾಲೀಕರು, ಕೆಲಸಗಾರರು ಮಾಸ್ಕ್ ಧರಿಸದೆ ವ್ಯಾಪಾರ ಚಟುವಟಿಕೆ ನಡೆಸುತ್ತಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು.

ಇಂತಹವರಿಗೆ ಹೆಚ್ಚಿನ ದಂಡ ವಿಧಿಸುವುದು ಅಗತ್ಯವಾಗಿದೆ ಎಂದು ಎಚ್ಚರಿಕೆ ನೀಡಿದರು. ನಗರದ ಕಾಳಿಕಾದೇವಿ ರಸ್ತೆಯಲ್ಲಿನ ಬಿ.ಎಸ್. ಚನ್ನಬಸಪ್ಪ ಬಟ್ಟೆ ಅಂಗಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮಳಿಗೆಯೊಳಗೆ ಸಾಮಾಜಿಕ ಅಂತರವಿಲ್ಲದೆ ಜನಜಂಗುಳಿ ಇರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿಯಮಿತ ಸಂಖ್ಯೆಯಲ್ಲಿ ಗ್ರಾಹಕರಿಗೆ ಅಂಗಡಿಯೊಳಗೆ ಪ್ರವೇಶ ನೀಡಬೇಕು, ಸರದಿಯಂತೆ ಗ್ರಾಹಕರಿಗೆ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಿದರು.

ಗ್ರಾಹಕರಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ತೀವ್ರ ಜನಜಂಗುಳಿ ಇದ್ದು, ನಿಯಮಾನುಸಾರ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳಿಗೆ ನೋಟಿಸ್ ನೀಡಿ, ಸೂಕ್ತ ಕ್ರಮ ಜರುಗಿಸುವಂತೆ ನಗರಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳನ್ನೊಳಗೊಂಡ ತಂಡ ಮಾಸ್ಕ್ ಅಭಿಯಾನ ನಡೆಸಿದ್ದನ್ನು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರೆ, ಮಾಸ್ಕ್ ಧರಿಸದವರು, ದಂಡ ಪಾವತಿಯನ್ನು ತಪ್ಪಿಸಲು ಪಲಾಯನ ಮಾಡುತ್ತಿದ್ದುದು ಕಂಡುಬಂದಿತು. ಇನ್ನು ಕೆಲವರು ಜಿಲ್ಲಾಧಿಕಾರಿಗಳು ನಡೆಸಿದ ಮಾಸ್ಕ್ ಅಭಿಯಾನಕ್ಕೆ ಪ್ರಶಂಸೆ ವ್ಯಕ್ತಪಡಿಸಿ, ಅರಿವು ಮೂಡಿಸುವುದರಿಂದ ಜನರಲ್ಲಿ ಜಾಗೃತಿ ಮೂಡಿಸುವದರ ಜೊತೆಗೆ ಈ ರೀತಿಯ ದಂಡ ಪ್ರಕ್ರಿಯೆ ಕ್ರಮಗಳಿಂದ ಸಾರ್ವಜನಿಕರಲ್ಲಿ ಇನ್ನಷ್ಟು ಪರಿಣಾಮಕಾರಿ ಜಾಗೃತಿ ಮೂಡಿಸಲು ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಗಡಿಯಾರ ಕಂಬದಿಂದ ಪ್ರಾರಂಭವಾದ ಮಾಸ್ಕ್ ಅಭಿಯಾನವು, ನಂತರ ವಿಜಯಲಕ್ಷ್ಮಿ ರಸ್ತೆ, ಕಾಳಿಕಾದೇವಿ ರಸ್ತೆ, ಚೌಕಿಪೇಟೆ, ಚಾಮರಾಜಪೇಟೆ, ಎನ್.ಆರ್. ರಸ್ತೆ, ಕೆ.ಆರ್. ರಸ್ತೆ ಸೇರಿದಂತೆ ವಿವಿಧೆಡೆ ಸಂಚರಿಸಿ, ಪಾದಚಾರಿಗಳು, ಬಟ್ಟೆ ಅಂಗಡಿಗಳು, ಕಿರಾಣಿ ಅಂಗಡಿಗಳು, ಜ್ಯೂವೆಲರಿ ಶಾಪ್‍ಗಳು, ಅಲ್ಲದೆ ಹೋಲ್‍ಸೇಲ್ ಮತ್ತು ರೀಟೇಲ್ ಶಾಪ್‍ಗಳಿಗೂ ತೆರಳಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಯಿತು. ಪೊಲೀಸ್ ಇಲಾಖೆ ಹಾಗೂ ನಗರಪಾಲಿಕೆ ಕಚೇರಿಯ ವತಿಯಿಂದ ಅಧಿಕಾರಿ, ಸಿಬ್ಬಂದಿಗಳು ದಂಡದ ಮೊತ್ತ ಸಂಗ್ರಹಿಸಿ, ರಸೀದಿ ನೀಡುವಲ್ಲಿ ನಿರತರಾಗಿದ್ದು ಕಂಡುಬಂದಿತು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ವಿವಿಧ ಅಧಿಕಾರಿಗಳು ಮಾಸ್ಕ್ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending